
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಶಿಕ್ಷಣ ಇಲಾಖೆಯಲ್ಲಿ ಖಾಲಿಯಿದ್ದ 13,500 ಶಿಕ್ಷಕ ಹುದ್ದೆಗಳಿಗೆ ನೇಮಕಾತಿ ಮಾಡಲಾಗಿದ್ದು, ಇನ್ನೂ ಮತ್ತೆ 15,000 ಮಂದಿ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ತುಮಕೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ್ದು, “ಸರ್ಕಾರಿ ಶಾಲೆಗಳ ಶಿಕ್ಷಕರ ಕೊರತೆ ನೀಗಿಸಲು ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಇದರಿಂದ, ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತದೆ. ಜತೆಗೆ ಪದವಿಪೂರ್ವ ಕಾಲೇಜುಗಳಿಗೂ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ” ಎಂದರು.
“ನೂರು ವರ್ಷ ಪೂರೈಸಿರುವ ಶಾಲೆಗಳಿಗೆ ವಿಶೇಷ ಅನುದಾನ ಬಿಡುಗಡೆ ಮಾಡಿ, ಅಭಿವೃದ್ಧಿ ಮಾಡಲಾಗುತ್ತದೆ. ‘ನಮ್ಮ ಶಾಲೆ–ನಮ್ಮ ಜವಾಬ್ದಾರಿ’ ಕಾರ್ಯಕ್ರಮದಡಿ ಶಾಲೆಗಳ ಅಭಿವೃದ್ಧಿಗೆ ದಾನಿಗಳು ಆರ್ಥಿಕ ನೆರವು ನೀಡುವಂತೆ ಉತ್ತೇಜಿಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.