
ರಸ್ತೆ ಅಪಘಾತವನ್ನೇ ನೆಪವಾಗಿಟ್ಟುಕೊಂಡು ಇಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಆರೋಪದ ಮೇಲೆ ಬಜರಂಗದಳದ ಕಾರ್ಯಕರ್ತರನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ಪೊಲೀಸರು ಬಂಧಿಸಿದ್ದಾರೆ.
ರಸ್ತೆ ಅಪಘಾತವನ್ನೇ ನೆಪವಾಗಿಟ್ಟುಕೊಂಡು ಬಜರಂಗದಳದ ಕಾರ್ಯಕರ್ತರೆನ್ನಲಾದ ತಂಡವು ಇಬ್ಬರ ಮೇಲೆ ಭಾನುವಾರ ಮಾರಣಾಂತಿಕವಾಗಿ ಹಲ್ಲೆ ನಡೆಸಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಸೋಮವಾರ ಐದು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಉಡುಪಿ, ಕೊಪ್ಪ ಮೂಲದ ಕುಟುಂಬದವರ ಕಾರು ಭಾನುವಾರ ಮಲೆನಾಡು ಭಾಗದ ಪ್ರಸಿದ್ಧ ದರ್ಗಾಕ್ಕೆ ಭೇಟಿ ನೀಡಿದ್ದರು. ಬಳಿಕ ಹಿಂದಿರುಗುತ್ತಿದ್ದ ವೇಳೆ ಇವರಿದ್ದ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಕಾರು ಬೈಕ್ ನಡುವೆ ಡಿಕ್ಕಿಯಾದರೂ ಕಾರನ್ನು ನಿಲ್ಲಿಸದೇ ಮುಂದೆ ಸಾಗಿದ್ದಾರೆಂದು ಆರೋಪಿಸಿ ಶೃಂಗೇರಿ ಬಸ್ ನಿಲ್ದಾಣದ ಬಳಿ ಬಜರಂಗದಳದ ಕಾರ್ಯಕರ್ತರೆನ್ನಲಾದವರು ಕಾರನ್ನು ಅಡ್ಡಗಟ್ಟಿ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿದ್ದಾರೆಂದು ಆರೋಪಿಸಲಾಗಿತ್ತು.
ಹಲ್ಲೆಯಿಂದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಶೃಂಗೇರಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಘಟನೆ ಸಂಬಂಧ ಗಾಯಾಳುಗಳ ಸಂಬಂಧಿಕರು ಶೃಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಕೊಪ್ಪ ಡಿವೈಎಸ್ಪಿ ಬಾಲಾಜಿ ಸಿಂಗ್ ಘಟನಾ ಸ್ಥಳ ಮತ್ತು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ಸಂಬಂಧ ಹರಿಹರಪುರ ಪೊಲೀಸ್ ಠಾಣೆಯಲ್ಲಿ ಬೈಕ್-ಕಾರು ಅಪಘಾತ ಪ್ರಕರಣ ಹಾಗೂ ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣ ಸಂಬಂಧ ದೂರು, ಪ್ರತಿ ದೂರು ದಾಖಲಾಗಿತ್ತು.