
ಹಾಸನ: ಕಳೆದ ನಾಲ್ಕೈದು ತಿಂಗಳಿನಿಂದ ವೇತನ ನೀಡಿಲ್ಲ ಎಂದು ಆರೋಪಿಸಿ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು ನಗರದ ಸಾಲಗಾಮೆ ರಸ್ತೆಯಲ್ಲಿನ ಜಿಲ್ಲಾ ಆರೋಗ್ಯಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಿದರು.
ಈ ವೇಳೆ ಡಾ. ಶಶಾಂಕ್ ಮಾಧ್ಯಮದೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಕೀಯ ಸಿಬ್ಬಂದಿಗಳಿಗೆ ಕಳೆದ ನಾಲ್ಕೈದು ತಿಂಗಳಿನಿಂದ ವೇತನ ನೀಡಿಲ್ಲ, ಇದರಿಂದ ತಮ್ಮ ಕುಟುಂಬ ನಿರ್ವಹಣೆ ಕಷ್ಟವಾಗಿದೆ. ಈ ಬಗ್ಗೆ ಸಂಭಂದಿಸಿದ ಇಲಾಖೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರು ಈ ವರೆಗೆ ನಮಗೆ ವೇತನ ನೀಡಿಲ್ಲ ಎಂದು ದೂರಿದರು. ಗ್ರಾಮೀಣ ಪ್ರದೇಶದ ಆರೋಗ್ಯ ಕೇಂದ್ರಗಳಲ್ಲಿ ಕೆಲಸ ಮಾಡಲು ಹಿಂದೇಟು ಹಾಕುವ ಸಂದರ್ಭದಲ್ಲಿ ನಾವು ಎಲ್ಲಾ ಸಮಸ್ಯೆಗಳನ್ನು ಎದುರಿಸಿ ನಿರಂತರವಾಗಿ ಕೆಲಸ ಮಾಡುತ್ತಿದ್ದೇವೆ. ಆದರೆ. ನಮ್ಮ ಸೇವೆಯನ್ನು ಕಡೆಗಣಿಸಲಾಗುತ್ತಿದೆ ಎಂದರು. ಇನ್ನ ನಮ್ಮನ್ನು ಗುತ್ತಿಗೆ ಆಧಾರದ ಮೇಲೆ ಐದು ವರ್ಷಕ್ಕೆ ಕೆಲಸಕ್ಕೆ ಸೇರಿಸಿಕೊಂಡಿದ್ದು, ಕೂಡಲೇ ನಮ್ಮ ಹುದ್ದೆಯನ್ನು ಖಾಯಂಗೊಳಿಸಬೇಕೆಂದು ಆಗ್ರಹಿಸಿದರು. ಕೂಡಲೇ ಸಂಭಂದಿಸಿದ ಇಲಾಖೆ ಸಚಿವರು ಹಾಗೂ ಜನಪ್ರತಿನಿಧಿಗಳು ನಮಗೆ ವೇತನ ಕೊಡಿಸುವ ನಿಟ್ಟಿನಲ್ಲಿ ಕ್ರಮ ವಹಿಸಬೇಕು. ಇಲ್ಲವಾದರೆ ವೇತನ ನೀಡುವವರೆಗೂ ವೈದ್ಯಕೀಯ ಸೇವೆಯನ್ನು ಬಹಿಷ್ಕರಿಸಿ ನಿರಂತರ ಪ್ರತಿಭಟನೆ ನಡೆಸಲಾಗುವುದು ಎಂದು ಇದೆ ವೇಳೆ ಎಚ್ಚರಿಸಿದರು,
ಇದೆ ವೇಳೆ ಗುತ್ತಿಗೆ ಆಧಾರಿತ ವೈದ್ಯಾಧಿಕಾರಿಗಳಾದ ಡಾ. ಚಂದನ್, ಡಾ. ಸುಜನ್, ಡಾ. ರಾಕೇಶ್, ಡಾ. ಮೋನಿಕಾ, ಡಾ. ಪ್ರಿಯಾಂಕ್, ಡಾ. ಸ್ನೇಹ, ಡಾ. ಶಶಿ ಇತರರು ಉಪಸ್ಥಿತರಿದ್ದರು.