
ಹೊಸಕೋಟೆ-ದಾಬಸ್ ಪೇಟೆ ಹೆದ್ದಾರಿಯ ಡಿವೈಡರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಐವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ರಾಮೇಶ್ವರ ಗೇಟ್ ಬಳಿ ಹಾದುಹೋಗಿರುವ ಹೊಸಕೋಟೆ-ದಾಬಸ್ ಪೇಟೆ ಹೆದ್ದಾರಿಯಲ್ಲಿ ಅಪಘಾತ ನಡೆದಿದೆ. ದೊಡ್ಡಬಳ್ಳಾಪುರದಿಂದ ದಾಬಸ್ ಪೇಟೆ ಕಡೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಬಲಭಾಗದ ಡಿವೈಡರ್ ದಾಟಿ ದಾಬಸ್ ಪೇಟೆಯಿಂದ ದೊಡ್ಡಬಳ್ಳಾಪುರಕ್ಕೆ ಬರುತ್ತಿದ್ದ ಕಂಟೈನರ್ಗೆ ಡಿಕ್ಕಿಹೊಡೆದಿದೆ ಎಂಬ ಮಾಹಿತಿ ತಿಳಿದುಬಂದಿದೆ.
ಅಪಘಾತದಲ್ಲಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದವರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿದೆ.
ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ದೊಡ್ಡಬೆಳವಂಗಲ ಠಾಣಾ ಪೊಲೀಸರು ಸ್ಥಳಕ್ಕೆ ದೌಢಾಯಿಸಿ, ಸ್ಥಳ ಪರಿಶೀಲನೆ ನಡೆಸಿದ್ದಾರೆ.