
ಕೆಎಸ್ಆರ್ಟಿಸಿ ಬಸ್ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಆಟೋದಲ್ಲಿದ್ದ ಇಬ್ಬರು ಮೃತಪಟ್ಟಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪುತ್ತೂರಿನ ಮಂಜಲ್ಪಡ್ಪು ಎಂಬಲ್ಲಿನ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಮಂಗಳೂರು ನಗರದಿಂದ ಪುತ್ತೂರಿಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಪುತ್ತೂರಿನಿಂದ ಕಬಕದ ಕಡೆಗೆ ಬರುತ್ತಿದ್ದ ಆಟೋ ನಿಯಂತ್ರಣ ತಪ್ಪಿ ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಟೋ ಪಲ್ಟಿಯಾಗಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದ ಕೆದಂಬಾಡಿ ಗ್ರಾಮದ ಮೊಹಮ್ಮದ್ ಎಂಬವರ ಎರಡನೇ ಪತ್ನಿ ಜಮೀಲಾ(49) ಮತ್ತು ಅವರ ಮೊಮ್ಮಗ ತಪ್ಸಿಬ್(5) ಮೃತಪಟ್ಟಿದ್ದಾರೆ. ಆಟೋ ಚಾಲಕ ಮೊಹಮ್ಮದ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದ ಭೀಕರ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.